ವರದಿ:- ನಾಗೇಶ್ . ಎಂ.ಎಚ್. ಮಾಗೇರಿ

ತಾಯಿ–ಮಗು ಆಸ್ಪತ್ರೆ ಮಂಜೂರಾತಿಗೆ ಸರ್ಕಾರಕ್ಕೆ ಮನವಿ.ಸಕಲೇಶಪುರ: ತಾಲ್ಲೂಕಿನ ಕ್ರಾಫರ್ಡ್ ಆಸ್ಪತ್ರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಹಂತ ಹಂತವಾಗಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಮಂಗಳವಾರ ಕ್ರಾಫರ್ಡ್ ಆಸ್ಪತ್ರೆ ಆವರಣದಲ್ಲಿ ವೈದ್ಯರ ನೂತನ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳಲ್ಲಿ ಹಲವರು ಜಿಲ್ಲಾ ಕೇಂದ್ರಗಳಲ್ಲಿ ವಾಸವಿದ್ದು, ಕರ್ತವ್ಯಕ್ಕಾಗಿ ಪ್ರತಿದಿನ ತಾಲ್ಲೂಕು ಕೇಂದ್ರಗಳಿಗೆ ಸಂಚರಿಸುವ ಪರಿಸ್ಥಿತಿ ಇದೆ. ಇದರಿಂದ ಸಮಯ ವ್ಯರ್ಥವಾಗುವುದಲ್ಲದೆ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಸೇವೆ ದೊರೆಯುವುದಕ್ಕೂ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ವೈದ್ಯರು ಆಸ್ಪತ್ರೆ ಸಮೀಪದಲ್ಲೇ ವಾಸಿಸುವ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು ₹1.47 ಕೋಟಿ ವೆಚ್ಚದಲ್ಲಿ ಎರಡು ನೂತನ ವಸತಿ ಗೃಹಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಕಾರಣ ಯಾವುದೇ ಸಂದರ್ಭದಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ತುರ್ತು ವೈದ್ಯಕೀಯ ಸೇವೆಗೆ ವೈದ್ಯರ ಲಭ್ಯತೆ ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವೈದ್ಯರಿಗೆ ಉತ್ತಮ ವಸತಿ ವ್ಯವಸ್ಥೆ ಕಲ್ಪಿಸುವುದು ಆರೋಗ್ಯ ಸೇವೆಯ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ ಎಂದರು.ಮುಂದಿನ ದಿನಗಳಲ್ಲಿ ಕ್ರಾಫರ್ಡ್ ಆಸ್ಪತ್ರೆಗೆ ಅಗತ್ಯ ವೈದ್ಯಕೀಯ ಯಂತ್ರೋಪಕರಣಗಳು, ಆಸ್ಪತ್ರೆ ನವೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಶೀಘ್ರ ಆರಂಭಿಸಲಾಗುವುದು. ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.ಹಿಂದಿನ ಆರೋಗ್ಯ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರು ಸಲ್ಲಿಸಿದ ಮನವಿಗೆ ಸ್ಪಂದಿಸಿ ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ ಅನುದಾನ ಬಿಡುಗಡೆ ಮಾಡಿರುವುದನ್ನು ಶಾಸಕರು ಸ್ಮರಿಸಿದರು. ಪ್ರಸ್ತುತ ಆರೋಗ್ಯ ಸಚಿವರೂ ಸಹ ಈ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಸ್ಪಂದಿಸುವ ವಿಶ್ವಾಸ ವ್ಯಕ್ತಪಡಿಸಿದರು.ಅದೇ ವೇಳೆ, ಸಕಲೇಶಪುರ ತಾಲೂಕಿಗೆ ಪ್ರತ್ಯೇಕ ತಾಯಿ–ಮಗು ಆಸ್ಪತ್ರೆ ಮಂಜೂರಾತಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ ಅವರು, ಕ್ಷೇತ್ರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿಗಳ ಕೊರತೆ ಕುರಿತು ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದ್ದು, ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.ಈ ಸಂಧರ್ಭದಲ್ಲಿ ಕ್ರಾಫರ್ಡ್ ವೈದ್ಯಧಿಕಾರಿ ಅರುಣ್ ಕುಮಾರ್,ಪುರಸಭಾ ಮುಖ್ಯ ಅಧಿಕಾರಿ ಮಹೇಶ್ವರಪ್ಪ, ಪುರಸಭಾ ಮಾಜಿ ಸದಸ್ಯೆ ಅನ್ನಪೂರ್ಣ, ಆರೋಗ್ಯ ಇಲಾಖೆಯ ಸಹಾಯಕ ಅಭಿಯಂತರ ಸೇತುರಾಮ್, ಮುಖಂಡರಾದ ಅಗ್ನಿ ಸೋಮಶೇಖರ್, ನವೀನ್ ಶೆಟ್ಟಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
